ಸುದ್ದಿ360 ದಾವಣಗೆರೆ ಜೂ.21: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲೇ ಶೇ.60 ರಿಂದ 74.99 ಅಂಕ ಪಡೆದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ರೂ.7,000 ಹಾಗೂ ಶೇ.75ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ರೂ.15,000 ಪ್ರೋತ್ಸಾಹಧನವನ್ನು ಡಿ.ಬಿ.ಟಿ ಪೋರ್ಟಲ್ ಮೂಲಕ ವಿದ್ಯಾರ್ಥಿಗಳ ಖಾತೆಗೆ ನೇರವಾಗಿ ಜಮೆ ಮಾಡಲಾಗುತ್ತಿದೆ. ಆ ಪ್ರಕಾರ ಬ್ಯಾಂಕ್ ಉಳಿತಾಯ ಖಾತೆಗೆ ಆಧಾರ್ ಲಿಂಕ್ ಆದ ವಿದ್ಯಾರ್ಥಿಗಳಿಗೆ ಈಗಾಗಲೇ ಪ್ರೋತ್ಸಾಹ ಧನ ಜಮೆಯಾಗಿರುತ್ತದೆ.
ಬ್ಯಾಂಕ್ ಖಾತೆಗೆ ಆಧಾರ್ ಸೀಡ್ ಆಗದ 2020ನೇ ಸಾಲಿನ 302 ವಿದ್ಯಾರ್ಥಿಗಳು ಮತ್ತು 2021ನೇ ಸಾಲಿನ 2086 ಪ.ಜಾತಿ ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಉಳಿತಾಯ ಖಾತೆಗೆ ಆಧಾರ್ ಲಿಂಕ್ ಮಾಡಿಸಿ ಸಂಬಂಧಿಸಿದ ಸಮಾಜ ಕಲ್ಯಾಣ ಇಲಾಖೆಗೆ ಆಧಾರ್ ಕಾರ್ಡ್ ಮತ್ತು ಎಸ್.ಎಸ್.ಎಲ್.ಸಿ. ಅಂಕಪಟ್ಟಿಯನ್ನು ಸಲ್ಲಿಸಿ ಆನ್‍ಲೈನ್‍ನಲ್ಲಿ ಅಪ್‍ಡೇಟ್ ಮಾಡಿಸಬೇಕಾಗಿರುತ್ತದೆ. ಆದ್ದರಿಂದ 2020 ಮತ್ತು 2021ನೇ ಸಾಲಿನಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿ ಪ್ರೋತ್ಸಾಹ ಧನ ಜಮೆಯಾಗದಿರುವ ವಿದ್ಯಾರ್ಥಿಗಳು ಸಂಬಂಧಿಸಿದ ಸಮಾಜ ಕಲ್ಯಾಣ ಇಲಾಖೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಕೌಸರ್ ರೇಷ್ಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.