ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ – ಫಸ್ಟ್ ರಿಯಾಕ್ಷನ್ ಏನು?

ಶಿವಮೊಗ್ಗ ಏ. 11:  ಶಿವಮೊಗ್ಗ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಉಪಮುಖ್ಯಮಂತ್ರಿ, ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್. ಈಶ್ವರಪ್ಪ ಧಿಡೀರ್ ಬೆಳವಣಿಗೆಯಲ್ಲಿ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ.

ಈ ಸಂಬಂಧ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಪತ್ರ ಬರೆದಿರುವುದಾಗಿ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದಾಗಿ ವಿನಂತಿಸಿಕೊಂಡಿದ್ದಾರೆ. ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯದ ಉಪ-ಮುಖ್ಯಮಂತ್ರಿಯವರೆಗೆ ಗೌರವ ಸ್ಥಾನ ಮಾನ ನೀಡಿದ ಪಕ್ಷದ ಹಿರಿಯರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ರಾಷ್ಟ್ರಾಧ್ಯಕ್ಷರು ತನ್ನ ಮನವಿಯನ್ನು ಅಂಗೀಕರಿಸುವ ವಿಶ್ವಾಸ ವ್ಯಕ್ತಪಡಿಸಿದ ಈಶ್ವರಪ್ಪನವರು, ಪಕ್ಷ ಚುನಾವಣಾ ಜವಾಬ್ದಾರಿ ನೀಡಿದಲ್ಲಿ ನಿರ್ವಹಿಸಲು ಸಿದ್ಧನಿರುವುದಾಗಿ ತಿಳಿಸಿದ್ದಾರೆ. ರಾಜ್ಯದಲ್ಲಿ ಪೂರ್ಣಬಹುಮತದೊಂದಿಗೆ ಬಿಜೆಪಿ ಸರ್ಕಾರ ರಚಿಸಲು ಎಲ್ಲ ನಾಯಕರೂ ಶ್ರಮಿಸುತ್ತಿದ್ದೇವೆ. ಕಾರ್ಯಕರ್ತರೂ ಇದಕ್ಕೆ ಪೂರಕವಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದರು.

ಈಶ್ವರಪ್ಪನವರು ನಿವೃತ್ತಿ ಘೋಷಿಸಿರುವುದು ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದು, ಪುತ್ರ ಕೆಇ ಕಾಂತೇಶ್ ಅವರಿಗೆ ಈಶ್ವರಪ್ಪ ಟಿಕೆಟ್ ಕೇಳಿದ್ದಾರೆ ಎನ್ನಲಾಗಿದೆ. ಇಂದು ರಾತ್ರಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ಸೂಚನೆಗಳಿದ್ದು, ಮಗನ ರಾಜಕೀಯ ಜೀವನಕ್ಕಾಗಿ ತಾವು ನಿವೃತ್ತಿ ಘೋಷಿಸಿದ್ದಾರೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

admin

admin

Leave a Reply

Your email address will not be published. Required fields are marked *

error: Content is protected !!