ಶಿಗ್ಗಾವಿ, ಸವಣೂರಿನಲ್ಲಿ ವಕೀಲರ ಸಂಘಗಳ ಕಟ್ಟಡ ನಿರ್ಮಾಣ ಕಾಮಗಾರಿಗೆ ಸಿಎಂ ಶಂಕುಸ್ಥಾಪನೆ
ಸುದ್ದಿ360 ಬೆಂಗಳೂರು, ಆ. 20: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ (ಭಾನುವಾರ) ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಹಾವೇರಿ ಹಾಗೂ ಧಾರವಾಡ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.
ಶಿಕ್ಷಣ ಸೇವೆಯಲ್ಲಿ 75 ಸಾರ್ಥಕ ವಸಂತಗಳನ್ನು ಕಳೆದು ಲಕ್ಷಾಂತರ ವಿದ್ಯಾರ್ಥಿಗಳ ಬಾಳು ಹಸನು ಮಾಡುತ್ತಾ ಬಂದಿರುವ ಸಂತ ಪೌಲರ ಶಾಲೆಯ ಅಮೃತ ಮಹೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿಗಳ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಇದೀಗ ಮುಖ್ಯಮಂತ್ರಿಗಳ ಹಾವೇರಿ ಹಾಗೂ ಧಾರವಾಡ ಜಿಲ್ಲೆಯ ಪ್ರವಾಸ ನಿಗದಿಯಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ತೆರಳಲಿದ್ದು, ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ಶಿಗ್ಗಾಂವ ತೆರಳಲಿರುವ ಸಿಎಂ ಬೊಮ್ಮಾಯಿ ಅವರು, ಶಿಗ್ಗಾಂವಿ ಮತ್ತು ಸವಣೂರಿನಲ್ಲಿ ವಕೀಲರ ಸಂಘಗಳ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ಹಾವೇರಿ ನ್ಯಾಯಾಲಯದ ಆವರಣದಲ್ಲಿ ನಿರ್ಮಾಣವಾಗಿರುವ ವಕೀಲರ ಸಂಘದ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಲಿದ್ದಾರೆ.
ಬಳಿಕ ಸಂಜೆ 5-30ಕ್ಕೆ ಹಾವೇರಿಯ ಪ್ರವಾಸಿ ಮಂದಿರದ ಬಳಿ ನಿರ್ಮಿಸಲಾಗಿರುವ ಸಂಚಾರಿ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ನೆರವೇರಿಸಲಿದ್ದಾರೆ.
ಈ ಎಲ್ಲ ಕಾರ್ಯಕ್ರಮಗಳ ನಂತರ ಸಂಜೆ ಸಿಎಂ ಬಸವರಾಜ ಬೊಮ್ಮಾಯಿ ಅವರು, ಹಾವೇರಿಯಿಂದ ರಸ್ತೆ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಹುಬ್ಬಳ್ಳಿಯಿಂದ ಬೆಂಗಳೂರಿಗೆ ವಿಶೇಷ ವಿಮಾನದ ಮೂಲಕ ಮರಳಲಿದ್ದಾರೆ.