ಸುದ್ದಿ360 ಬೆಂಗಳೂರು, ಜೂ.19: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿರುವ ಸಾರ್ವಜನಿಕ ಸಮಾರಂಭ ಸ್ಥಳ ಕೊಮ್ಮಘಟ್ಟ ಕ್ಕೆ ಭೇಟಿ ನೀಡಿ ಸಿದ್ಧತಾ ಕಾರ್ಯಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಎಸ್ ಟಿ ಸೋಮಶೇಖರ್, ಮುನಿರತ್ನ , ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.. ನಾಳೆ ಶಂಕು ಸ್ಥಾಪನೆಯಾಗಲಿರುವ ಬೆಂಗಳೂರು ಉಪನಗರ ರೈಲು ಯೋಜನೆ, ರಾಷ್ಟ್ರೀಯ ಹೆದ್ದಾರಿ ಕುರಿತು ಮುಖ್ಯಮಂತ್ರಿಗಳಿಗೆ ಅಧಿಕಾರಿಗಳು ಪ್ರಾತ್ಯಕ್ಷಿಕೆ ನೀಡಿ ವಿವರಣೆ ನೀಡಿದರು.
ಪ್ರಧಾನಿ ನರೇಂದ್ರ ಮೋದಿಯವರು ಜೂನ್ 20, ನಾಳೆ ಮಧ್ಯಾಹ್ನ 12.30 ಕ್ಕೆ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಮಿದುಳು ಸಂಶೋಧನಾ ಕೇಂದ್ರ ಲೋಕಾರ್ಪಣೆಗೊಳಿಸಿ ಬಾಗ್ಚಿ- ಪಾರ್ಥಸಾರಥಿ ಆಸ್ಪತ್ರೆಯ ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ. ಮಧ್ಯಾಹ್ನ 1.45 ಕ್ಕೆ ಪ್ರಧಾನಿಯವರು (ಬೇಸ್) ಕ್ಯಾಂಪಸ್ ಗೆ ತೆರಳಿ, ಡಾ:ಬಿ.ಆರ್.ಅಂಬೇಡ್ಕರ್ ಕಂಚಿನ ಪುತ್ಥಳಿ ಅನಾವರಣ, ಡಾ:ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಾಮಿಕ್ಸ್ ಕ್ಯಾಂಪಸ್ ಉದ್ಘಾಟನೆ ಹಾಗೂ ಮೇಲ್ದರ್ಜೆಗೇರಿಸಿದ 150 ಐಟಿಐಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ಮಧ್ಯಾಹ್ನ 2.45 ಕ್ಕೆ ಬೆಂಗಳೂರಿನ ಕೊಮ್ಮಘಟ್ಟದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆಗೊಳಿಸಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಮೈಸೂರಿಗೆ ತೆರಳಲಿದ್ದಾರೆ.