ಮುರುಘಾ ಶರಣರ ಬಂಧನ – ಪ್ರತಿಭಟನೆಗೆ ಮುಂದಾದ ಅಭಿಮಾನಿಗಳು

ಸುದ್ದಿ360 ಚಿತ್ರದುರ್ಗ, ಸೆ.01: ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರನ್ನು ಗುರುವಾರ ರಾತ್ರಿ 10 ಗಂಟೆ ವೇಳೆಗೆ  ಮುರುಘಾ ಮಠದಲ್ಲಿಯೇ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.

ಮುರುಘಾ ಶರಣರನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಲಾಗಿದೆ. ವೈದ್ಯಕೀಯ ತಪಾಸಣೆಗಾಗಿ ಅವರನ್ನು ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡಕ್ಕೆ ಕರೆದೊಯ್ಯಲು ಸಿದ್ಧತೆ ನಡೆದಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ತಿಳಿಸಿದ್ದಾರೆ.

ಭಾರಿ ಸಂಖ್ಯೆಯಲ್ಲಿ ಮುರುಘಾ ಮಠಕ್ಕೆ ಬಂದಿದ್ದ ಪೊಲೀಸ್ ತನಿಖಾ ತಂಡ, ಮುರುಘಾ ಶರಣರನ್ನು ವಶಕ್ಕೆ ಪಡೆದು ಬಿಗಿ ಭದ್ರತೆಯಲ್ಲಿ ತಮ್ಮೊಂದಿಗೆ ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಿ ತನಿಖಾಧಿಕಾರಿ ಡಿವೈಎಸ್‌ಪಿ ಅನಿಲ್‌ಕುಮಾರ್ ನೇತೃತ್ವದಲ್ಲಿ ವಿಚಾರಣೆ ನಡೆಸಲಾಯಿತು. ಇದಕ್ಕೂ ಮೊದಲು ಗುರುವಾರ ಪ್ರಕರಣದ ಎರಡನೇ ಆರೋಪಿ ಹಾಸ್ಟೆಲ್ ವಾರ್ಡನ್ ರಶ್ಮಿ ಅವರನ್ನು ತನಿಖಾ ತಂಡ ವಶಕ್ಕೆ ಪಡೆದಿತ್ತು.

ಮುರುಘಾ‌ ಮಠದ ಇಬ್ಬರು ಬಾಲಕಿಯರು ಮೈಸೂರಿನ ಒಡನಾಡಿ ಸಂಸ್ಥೆಯ ಮೂಲಕ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಪೋಕ್ಸೋ ಕಾಯ್ದೆಯ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣವನ್ನು ಮೈಸೂರಿನ ನಜರಾಬಾದ್ ಠಾಣೆಯಿಂದ ಚಿತ್ರದುರ್ಗದ ಗ್ರಾಮಾಂತರ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು.

ವಿಶೇಷ ವಾರ್ಡ್: ಜಿಲ್ಲಾ ಆಸ್ಪತ್ರೆಯ ಹೊಸ ಕಟ್ಟಡದಲ್ಲಿ ಮುರುಘಾ ಶರಣರ ಸಲುವಾಗಿಯೇ ಕಳೆದ ಮೂರು ದಿನಗಳಿಂದ ವಿಶೇಷ ವಾರ್ಡ್ ಸಿದ್ಧಪಡಿಸಲಾಗಿದೆ. ಅದೇ ವಾರ್ಡ್‌ನಲ್ಲಿ ಶರಣರನ್ನು ದಾಖಲಿಸಲಾಗುತ್ತದೆ ಎನ್ನಲಾಗಿದೆ.

ಪ್ರತಿಭಟನೆ

ಮುರುಘಾಶರಣರ ಬಂಧನವನ್ನು ಖಂಡಿಸಿ ಹಲವೆಡೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ದಾವಣಗೆರೆಯಲ್ಲಿ ಸರ್ವ ಸಮಾಜದ ಮುರುಘಾಮಠದ ಅಭಿಮಾನಿಗಳಿಂದ ಜಯದೇವ ವೃತ್ತದಲ್ಲಿ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

admin

admin

Leave a Reply

Your email address will not be published. Required fields are marked *

error: Content is protected !!