ಸುದ್ದಿ360 ದಾವಣಗೆರೆ ಜು.27: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಕಾರ್ಯಕಾರಣಿ ಸದಸ್ಯ ಪ್ರವೀಣ್ ನೆಟ್ಟಾರು ಕೊಲೆ ಖಂಡಿಸಿ, ದಾವಣಗೆರೆ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪದಾಧಿಕಾರಿಗಳು ಬಿಜೆಪಿ ಜಿಲ್ಲಾಧ್ಯಕ್ಷರಿಗೆ ಸಾಮೂಹಿಕ ರಾಜೀನಾಮೆ ಸಲ್ಲಿಸಿದ್ದಾರೆ. ಹಾಗೂ ಹತ್ಯೆ ಕಾರಣರಾದವರನ್ನು ಕೂಡಲೇ ಬಂಧಿಸಿ ಉಗ್ರಶಿಕ್ಷೆ ನೀಡಬೇಕೆಂದು ಆಗ್ರಹಿಸಿದ್ದಾರೆ.
ಈ ಬಗ್ಗೆ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಆರ್. ಎಲ್. ಶಿವಪ್ರಕಾಶ್ ಅವರು, ಜಿಲ್ಲಾಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಈ ಹಿಂದೆ ನಡೆದಂತ ಬಿಜೆಪಿ ಕಾರ್ಯಕರ್ತರ ಹತ್ಯೆಯಲ್ಲಿ ಯಾವ ರೀತಿ ನ್ಯಾಯ ಸಿಕ್ಕಿದೆ ಎಂಬುದು ಕಣ್ಣ ಮುಂದೆ ಇದೆ. ಸರ್ಕಾರದ ಕಠಿಣ ಕ್ರಮ ಎಂಬ ಭರವಸೆ, ಭರವಸೆಯಾಗಿಯೇ ಉಳಿದಿದೆ. ಹೀಗಾಗಿ ಜಿಲ್ಲೆಯ ಯುವ ಮೋರ್ಚಾದ ಪದಾಧಿಕಾರಿ ಹಾಗೂ ಮಂಡಳದ ಅಧ್ಯಕ್ಷರು, ಪದಾಧಿಕಾರಿಗಳು ರಾಜೀನಾಮೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಯುವ ಮುಖಂಡ ಪ್ರವಿಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ. ಬಿಜೆಪಿ ಸರ್ಕಾರ ರಚನೆಯಾಗಲು ಅನೇಕ ಕಾರ್ಯಕರ್ತರು ಸೈದ್ಧಾಂತಿಕವಾಗಿ ತ್ಯಾಗ, ಬಲಿದಾನ ಮಾಡಿದ್ದಾರೆ. ಇದರಿಂದ ಕೇಂದ್ರ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದಿದೆ. ಇಂತಹ ಸಂದರ್ಭದಲ್ಲಿ ಬಿಜೆಪಿ ಮುಂಡರ ಹತ್ಯೆ ನಡೆಯುತ್ತಿದೆ. ಈ ಎಲ್ಲಾ ಘಟನೆ ನೋಡಿದ್ರೆ, ಈ ಸರ್ಕಾರ ಸೈದ್ಧಾಂತಿಕವಾಗಿ ರಚನೆಯಾದ ಸರ್ಕಾರವೇ ಎಂಬ ಅನುಮಾನ ಮೂಡುತ್ತದೆ.
ಪ್ರವೀಣ್ ಪಕ್ಷ ಮತ್ತು ದೇಶ ಸೇವೆಗೆ ತನ್ನನ್ನು ತಾನು ತೊಡಗಿಸಿಕೊಂಡಿದ್ದನು. ಇಂತಹ ಸಕ್ರಿಯ ಬಿಜೆಪಿ ಕಾರ್ಯಕರ್ತರನ್ನು ಹತ್ಯೆ ಮಾಡಿರುವುದು ಖಂಡನೀಯ. ಸಮಾಜಕ್ಕಾಗಿ ಪ್ರಾಣ ತೆತ್ತಿರುವ ಪ್ರವೀಣ ಆತ್ಮಕ್ಕೆ ಶಾಂತಿ ಕೋರುವ ಮೂಲಕ ಹತ್ಯೆಗೆ ಕಾರಣ ಆದವರನ್ನು ಕೂಡಲೇ ಬಂಧಿಸಿ, ಉಗ್ರ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.