ದಾವಣಗೆರೆ ಅಭಿವೃದ್ಧಿಗೆ ಬಜೆಟ್‌ನಲ್ಲಿ ವಿಶೇಷ ಆದ್ಯತೆ: ನೀರಾವರಿ–ಆರೋಗ್ಯ–ಶಿಕ್ಷಣಕ್ಕೆ ಹೆಚ್ಚಿನ ಒತ್ತು – ಸಚಿವ ಎಸ್.ಎಸ್. ಮಲ್ಲಿಕಾರ್ಜುನ್

ದಾವಣಗೆರೆ, ಜನವರಿ 26: ಮುಂಬರುವ ರಾಜ್ಯ ಬಜೆಟ್‌ನಲ್ಲಿ ದಾವಣಗೆರೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಮಹತ್ವದ ಪ್ರಸ್ತಾವನೆಗಳನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ವಿಶೇಷವಾಗಿ ನೀರಾವರಿ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳ ಬಲವರ್ಧನೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಅವರು ತಿಳಿಸಿದ್ದಾರೆ.

ಸೋಮವಾರ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದ ನಂತರ ಜೆಜೆಎಂ ಮೆಡಿಕಲ್ ಕಾಲೇಜಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಪ್ರಮುಖ ಬೇಡಿಕೆಗಳ ಕುರಿತು ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗಿದ್ದು, ಬಜೆಟ್‌ನಲ್ಲಿ ಅಗತ್ಯ ಅನುದಾನ ಪಡೆಯಲು ಸರ್ಕಾರದ ಮಟ್ಟದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ನೀರಾವರಿ ಯೋಜನೆಗಳಿಗೆ ವೇಗ
ಹರಿಹರ ತಾಲ್ಲೂಕಿನ ಬೈರನಪಾದ ನೀರಾವರಿ ಯೋಜನೆಗೆ ಚಾಲನೆ ನೀಡಲು ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದು ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಸಚಿವರು ತಿಳಿಸಿದರು.

ಜಿಲ್ಲೆಯ ಕೆರೆಗಳನ್ನು ತುಂಬಿಸುವ ಯೋಜನೆಯಡಿ, ಹಳೆಯದಾಗಿ ಒಡೆದು ಹೋಗಿರುವ ಪೈಪ್‌ಲೈನ್‌ಗಳ ಬದಲಿಗೆ ಹೊಸ ಕ್ಯಾಸ್ಟ್ ಐರನ್ ಪೈಪ್‌ಗಳನ್ನು ಅಳವಡಿಸಲು ಟೆಂಡರ್ ಪ್ರಕ್ರಿಯೆ ಆರಂಭಿಸಲಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ದಾವಣಗೆರೆ ತಾಲ್ಲೂಕಿನ ಹಲವು ಕೆರೆಗಳಿಗೆ ನೀರು ತುಂಬಿಸಲು ಅನುಕೂಲವಾಗಲಿದೆ.

ಆರೋಗ್ಯ ಕ್ಷೇತ್ರಕ್ಕೆ ಮಹತ್ವದ ಯೋಜನೆಗಳು
ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಹಳೆಯ ಕಟ್ಟಡಗಳ ಬದಲಿಗೆ 175 ಕೋಟಿ ರೂ. ವೆಚ್ಚದಲ್ಲಿ 200 ಹಾಸಿಗೆಗಳ ಸುಸಜ್ಜಿತ ಹೊಸ ಆಸ್ಪತ್ರೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಇದಕ್ಕೆ ಸಚಿವ ಸಂಪುಟದ ಅನುಮೋದನೆ ಬಾಕಿಯಿದ್ದು, ಆಸ್ಪತ್ರೆಯಲ್ಲಿ ಎಂಆರ್‌ಐ (MRI) ಸ್ಕ್ಯಾನಿಂಗ್ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯ ತಾಲ್ಲೂಕು ಕೇಂದ್ರಗಳಲ್ಲಿರುವ ಡಯಾಲಿಸಿಸ್ ಘಟಕಗಳು ತಾಂತ್ರಿಕ ಕಾರಣಗಳಿಂದ ಸ್ಥಗಿತಗೊಂಡಿರುವುದು ಗಮನಕ್ಕೆ ಬಂದಿದ್ದು, ತಂತ್ರಜ್ಞರ ನೇಮಕ ಹಾಗೂ ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಶಿಕ್ಷಣ ಮತ್ತು ವಿಶ್ವವಿದ್ಯಾಲಯ ಅಭಿವೃದ್ಧಿ
ದಾವಣಗೆರೆ ವಿಶ್ವವಿದ್ಯಾಲಯದ ಅಭಿವೃದ್ಧಿಗಾಗಿ ಈಗಾಗಲೇ 33 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಪರೀಕ್ಷಾಂಗ ವಿಭಾಗದ ಬಲವರ್ಧನೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.

ರೈತರಿಗೆ ನೆರವಾಗುವ ಯೋಜನೆಗಳು
ಹರಿಹರ ತಾಲ್ಲೂಕಿನ ಕಾರ್ಗಿಲ್ ಮತ್ತು ಸಿದ್ದಿ ಸಿರಿ ಮೆಕ್ಕೆಜೋಳ ಸಂಸ್ಕರಣಾ ಘಟಕಗಳ ಪುನಶ್ಚೇತನ ಕುರಿತಂತೆ ಮಾಹಿತಿ ಪಡೆದುಕೊಳ್ಳಲಾಗಿದ್ದು, ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಕ್ರಮ ವಹಿಸಲಾಗುವುದು ಎಂದರು.

ಇದಲ್ಲದೆ, ಹಣ್ಣು ಬೆಳೆಗಾರರಿಗೆ ನೆರವಾಗುವ ಉದ್ದೇಶದಿಂದ ರೈಪಿಂಗ್ ಚೇಂಬರ್ ಹಾಗೂ ಕೋಲ್ಡ್ ಸ್ಟೋರೇಜ್ ಸೌಲಭ್ಯಗಳ ಸದ್ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಹೇಳಿದರು.

400 ಹಾಸಿಗೆಗಳ ತುರ್ತು ಚಿಕಿತ್ಸಾ ಘಟಕ ಪ್ರಸ್ತಾವನೆ
ದಕ್ಷಿಣ ವಿಧಾನಸಭಾ ಕ್ಷೇತ್ರದ ಜನರ ಆರೋಗ್ಯ ಹಿತದೃಷ್ಟಿಯಿಂದ ಬಾಪೂಜಿ ಆಸ್ಪತ್ರೆಯ ಸಹಯೋಗದಲ್ಲಿ 400 ಹಾಸಿಗೆಗಳ ತುರ್ತು ಚಿಕಿತ್ಸಾ ಘಟಕ ಆರಂಭಿಸುವ ಪ್ರಸ್ತಾವನೆ ಇದೆ ಎಂದು ಸಚಿವರು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

ಕೇಂದ್ರ ಬಜೆಟ್ ಮೇಲೂ ನಿರೀಕ್ಷೆ
ಈ ಸಂದರ್ಭದಲ್ಲಿ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಮಾತನಾಡಿ, ಕೇಂದ್ರ ಸರ್ಕಾರವು ಫೆಬ್ರವರಿ 1ರಂದು ಬಜೆಟ್ ಮಂಡಿಸಲಿದ್ದು, ಜಿಎಸ್‌ಟಿ ಆದಾಯದಲ್ಲಿ ಕರ್ನಾಟಕ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಈ ಹಿನ್ನೆಲೆ ಕೇಂದ್ರದಿಂದ ರಾಜ್ಯಕ್ಕೆ ಹಲವು ಅಭಿವೃದ್ಧಿ ಯೋಜನೆಗಳು ಲಭಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಏಮ್ಸ್, ಐಐಟಿ ಸೇರಿದಂತೆ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಮತ್ತು ಯೋಜನೆಗಳ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ ಎಂದರು.

ಈ ವೇಳೆ ಬಯಲುಸೀಮೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹೆಚ್. ಮಂಜಪ್ಪ, ದೂಡಾ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಅಧ್ಯಕ್ಷ ಶಾಮನೂರು ಟಿ. ಬಸವರಾಜ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.

Leave a Comment

error: Content is protected !!