ಸುದ್ದಿ360, ದಾವಣಗರೆ ಸೆ.30: ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘ, ಬೆಂಗಳೂರು ಹಾಗೂ ದಾವಣಗೆರೆ ಜಿಲ್ಲಾ ಘಟಕ ಇವರ ಸಹಯೋಗದಲ್ಲಿ ವಾಲ್ಮೀಕಿ ಸಮುದಾಯದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭವನ್ನು ಅ.8 ರಂದು ಹಮ್ಮಿಕೊಳ್ಳಲಾಗಿದೆ ಎಂದು ದಾವಣಗೆರೆ ಜಲ್ಲಾ ಘಟಕದ ಅಧ್ಯಕ್ಷ ಕೆ.ಸಿ. ಶ್ರೀನಿವಾಸಮೂರ್ತಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಈ ಕುರಿತಾಗಿ ಮಾಹಿತಿ ನೀಡಿದ ಅವರು, ಪ್ರತಿಭಾ ಪುರಸ್ಕಾರ ಸಮಾರಂಭವು ನಗರದ ನಿಜಲಿಂಗಪ್ಪ ಬಡಾವಣೆ, ರಿಂಗ್ ರಸ್ತೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದು, ಅಂದು ಬೆಳಿಗ್ಗೆ 10.30ಕ್ಕೆ ಗಣಿ ಮತ್ತು ಭೂ ವಿಜ್ಞಾನ ಮತ್ತು ತೋಟಗಾರಿಕಾ ಸಚಿವರು ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜಗಳೂರು ವಿಧಾನಸಭಾ ಕ್ಷೇತ್ರ ಶಾಸಕರಾದ ಬಿ. ದೇವೇಂದ್ರಪ್ಪ ಚಿಕ್ಕಮ್ಮನಹಟ್ಟಿ ಅಧ್ಯಕ್ಷತೆ ವಹಿಸಲಿದ್ದು, ಇನ್ಸೈಟ್ಸ್ ಐಎಎಸ್ ಸಂಸ್ಥಾಪಕರು ಮತ್ತು ನಿರ್ದೇಶಕರಾದ ವಿನಯಕುಮಾರ್ ಬಿಜಿ ಕಕ್ಕರಗೊಳ್ಳ ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದರು.
ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ 90 ಕ್ಕೂ ಹೆಚ್ಚು ಅಂಕ ಗಳಿಸಿದ 330 ವಿದ್ಯಾರ್ಥಿಗಳು ಮತ್ತು ಪಿಯುಸಿ ಪರೀಕ್ಷೆಯಲ್ಲಿ 80ಕ್ಕೂ ಹೆಚ್ಚು ಅಂಕ ಗಳಿಸಿದ 120 ವಿದ್ಯಾರ್ಥಿಗಳನ್ನು ಈಗಾಗಲೇ ಗುರುತಿಸಲಾಗಿದ್ದು, ಪ್ರತಿಯೊಬ್ಬರಿಗೂ ಆಮಂತ್ರಣ ನೀಡಲಾಗಿದೆ. ಹೆಚ್ಚಿನ ಮಾಹಿತಿ ಹಾಗೂ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳುವವರು 9632854711, 9980301272 ಮೊಬೈಲ್ ಸಂಖ್ಯೆಗಳಿಗೆ ಕರೆ ಮಾಡಬಹುದಾಗಿದೆ ಎಂದು ಶ‍್ರೀನಿವಾಸಮೂರ್ತಿ ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಬಳ್ಳಾರಿ ಕ್ಷೇತ್ರ ಸಂಸದರಾದ ವೈ ದೇವೇಂದ್ರಪ್ಪ, ಜಗಳೂರು ವಿಧಾನಸಭಾ ಕ್ಷೇತ್ರ ಮಾಜಿ ಶಾಸಕರಾದ ಎಸ್ ವಿ ರಾಮಚಂದ್ರ, ಹೆಚ್.ಪಿ. ರಾಜೇಶ್ ಹಾಗೂ ಮಹಾನಗರಪಾಲಿಕೆ ಮಹಾಪೌರರಾದ ವಿನಾಯಕ ಪೈಲ್ವಾನ್, ವಾಲ್ಮೀಕಿ ಅಭಿವೃದ್ಧಿ ನಿಗಮ ವ್ಯವಸ್ಥಾಪಕ ನಿರ್ದೇಶಕರಾದ ಎಸ್. ಪದ್ಮನಾಭ್, ಸಂಘದ ರಾಜ್ಯಾಧ್ಯಕ್ಷ ಎ.ಸಿ. ತಿಪ್ಪೇಸ್ವಾಮಿ, ಪ್ರಧಾನ ಕಾರ್ಯದರ್ಶಿ ಎ. ರಾಜಶೇಖರ್ ಸೇರಿದಂತೆ ಸಮಾಜದ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ದಾವಣಗೆರೆ ಜಿಲ್ಲಾ ಘಟಕದ ಕಾರ್ಯದರ್ಶಿ ನಿರಂಜನ್ ಕೆ.ಸಿ., ಅಜ್ಜಯ್ಯ ಎನ್., ಹಾಗೂ ನಾಗರಾಜ್ ಇದ್ದರು.